ಬೆಳಗಾವಿ: ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ – 2021ನ್ನು ಜಾರಿಗೆ ತರಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನಸಭೆಯಲ್ಲಿಂದು ತಿಳಿಸಿದ್ದಾರೆ. ಕಲಾಪ ಆರಂಭವಾಗುತ್ತಿದ್ದಂತೆ ಮತಾಂತರ ನಿಷೇಧಕ್ಕೆ ಅವಕಾಶ ಕಲ್ಪಿಸುವ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ’ ಕುರಿತು ವಿವರಣೆ ನೀಡಿದ ಗೃಹ ಸಚಿವರು, ಮಸೂದೆ ಬಗ್ಗೆ ಪರ, ವಿರೋಧ ಚರ್ಚೆಗಳು ನಡೆಯುತ್ತಿವೆ. ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂತಹ ಮಸೂದೆಯನ್ನು ಜಾರಿಗೊಳಿಸಲಾಗುತ್ತಿದೆ. ಹಿಂದಿನ ಸರ್ಕಾರ ಈ ವಿಧೇಯಕ ಕುರಿತು ಕರಡು ಸಿದ್ಧಪಡಿಸಿತ್ತು. ಅದನ್ನು ನಾವು ಜಾರಿಗೆ ತರುತ್ತಿದ್ದೇವೆ. ಈ ಮಸೂದೆಯನ್ನು ಜಾರಿಗೆ ತರುತ್ತಿರುವ 9ನೇ ರಾಜ್ಯ ನಮ್ಮದಾಗಿದೆ ಎಂದರು. ಬಳಿಕ, ವಿಧೇಯಕ ಕುರಿತು ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಹಿಂದಿನ ಸರ್ಕಾರವೇ ಈ ಮಸೂದೆ ಬಗ್ಗೆ ಕರಡು ಸಿದ್ಧಪಡಿಸಿತ್ತು. ಇದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸಲಾಗುವುದು. ಒತ್ತಾಯಪೂರ್ವಕವಾಗಿ ಮತಾಂತರಗೊಳಿಸುವವರನ್ನು ಶಿಕ್ಷಿಸುವ ಉದ್ದೇಶದಿಂದ ಈ ವಿಧೇಯಕವನ್ನು ಮಂಡಿಸಲಾಗಿದೆ ಎಂದರು ಇದಕ್ಕೆ ಪ್ರತಿಕ್ರಿಯಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಹಿಂದಿನ ಸರ್ಕಾರ ಒಪ್ಪಿಗೆ ನೀಡಿರುವ ಕುರಿತು ಮಾಹಿತಿ ಕೇಳಿದರು.

ಈ ವೇಳೆ ಮಧ್ಯ ಪ್ರವೇಶಿಸಿದ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸರ್ಕಾರ ನೀಡಿದ ದಾಖಲೆಗಳನ್ನು ಸದನದ ಮುಂದಿರಿಸಿ ಮಸೂದೆಯ ಕರಡಿಗೆ ಹಿಂದಿನ ಸರ್ಕಾರ ಒಪ್ಪಿಗೆ ನೀಡಿರುವ ಬಗ್ಗೆ ಮಾಹಿತಿ ನೀಡಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವರು ವಿಧೇಯಕದ ಚರ್ಚೆಯಲ್ಲಿ ಪಾಲ್ಗೊಂಡರು. ಈ ವೇಳೆ, ಸದನವನ್ನು 10 ನಿಮಿಷ ಮುಂದೂಡಿ ಕಲಾಪ ಪುನರಾರಂಭಗೊಂಡಾಗ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತಾಂತರ ನಿಷೇಧ ಮಸೂದೆ ಕುರಿತು ಮಾಹಿತಿ ನೀಡಿದರು.
