ಬೆಂಗಳೂರು: ಕೇಂದ್ರ ಸಂಸ್ಕೃತಿ ಸಚಿವಾಲಯ ಆಯೋಜಿಸಿರುವ ಸಂಕಲ್ಪ್ ಸೆ ಸಿದ್ಧಿ- ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಅಮಿತ್ ಶಾ , ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷಗಳಾಗಿರುವ ಹಿನ್ನೆಲೆಯಲ್ಲಿ ಅಮೃತ ಮಹೋತ್ಸವ ಆಚರಣೆ ಮಹತ್ವದ್ದಾಗಿದೆ. ದೇಶ ಕಳೆದ 75 ವರ್ಷಗಳಲ್ಲಿ ಅಂತರಿಕ್ಷದಿಂದ ಹಿಡಿದು, ಮೂಲಸೌಕರ್ಯದವರೆಗೂ ಹಲವು ಅಭಿವೃದ್ಧಿಗಳನ್ನು ಕಂಡಿದೆ. ಮುಂದಿನ 25 ವರ್ಷದೊಳಗೆ ಭಾರತ, ಜಾಗತಿಕ ಮಟ್ಟದಲ್ಲಿ ಅಗ್ರಮಾನ್ಯ ರಾಷ್ಟ್ರವಾಗಿ ಹೊರಹೊಮ್ಮಲು ಪ್ರತಿಯೊಬ್ಬರ ಕೊಡುಗೆ ಅಗತ್ಯ ಎಂದರು. ಕಳೆದ 8 ವರ್ಷಗಳಲ್ಲಿ ಪಾರದರ್ಶಕ ಆಡಳಿತದಿಂದ, ಭ್ರಷ್ಟಾಚಾರ ನಿಗ್ರಹಗೊಂಡಿದ್ದು, ಎಲ್ಲ ಫಲಾನುಭವಿಗಳಿಗೂ ಸುಲಭವಾಗಿ ಸರ್ಕಾರದ ಸೌಲಭ್ಯಗಳು ದೊರೆಯುತ್ತಿವೆ. ಕಟ್ಟಕಡೆಯ ವ್ಯಕ್ತಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸುವುದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಆದ್ಯತೆಯಾಗಿದೆ ಎಂದು ತಿಳಿಸಿದರು. ತೆರಿಗೆ ಸಂಗ್ರಹದಲ್ಲಿಯೂ ಉತ್ತಮ ಬೆಳವಣಿಗೆ ಸಾಧಿಸಲಾಗಿದ್ದು, ಆತ್ಮನಿರ್ಭರ ಭಾರತ ಮತ್ತು ಮೇಕ್ ಇನ್ ಇಂಡಿಯಾ ಉಪಕ್ರಮಗಳಿಂದ ಭಾರತದ ಆರ್ಥಿಕ ವ್ಯವಸ್ಥೆ ಸುಭದ್ರವಾಗಿದೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅನ್ವೇಷಣೆ, ತಂತ್ರಜ್ಞಾನ ಆಧಾರಿತ ರಾಜ್ಯವನ್ನಾಗಿ ರೂಪಿಸಲು, ಕರ್ನಾಟಕ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ರಾಜ್ಯದಲ್ಲಿ ಕೈಗಾರಿಕೋದ್ಯಮಿಗಳಿಗೆ ಪೂರಕ ವಾತಾವರಣ ನಿರ್ಮಿಸಲಾಗಿದೆ. 2ನೇ ಸ್ತರದ ನಗರಗಳಲ್ಲಿಯೂ ಸಹ ಹೂಡಿಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದ ಸಮಗ್ರ ಅಭಿವೃದ್ಧಿಯಿಂದ, ದೇಶದ ಅಭಿವೃದ್ಧಿ ಎನ್ನುವ ಧ್ಯೇಯದೊಂದಿಗೆ ಕಾರ್ಯನಿರ್ವಹಿಸಲಾಗುತ್ತಿದೆ ಎಂದರು.

ಸಚಿವ ಕಿಶನ್ ರೆಡ್ಡಿ , ಭಾರತ, 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸುತ್ತಿರುವ ಸುಸಂದರ್ಭದಲ್ಲಿ ಸಂಕಲ್ಪ ಸಿದ್ಧಿ ಕಾರ್ಯಕ್ರಮ, ಉದ್ದೇಶಿತ ಗುರಿ ಸಾಧಿಸುವ ವೇದಿಕೆಯಾಗಿದೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರ, 2025ರ ವೇಳೆಗೆ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಹೊಂದುವ ಗುರಿ ಹೊಂದಿದೆ. ಆ ನಿಟ್ಟಿನಲ್ಲಿ ಉದ್ಯಮಿಗಳಿಗೆ ಪರಿಸರ ಸ್ನೇಹಿ ವಾತಾವರಣ ನಿರ್ಮಿಸಲಾಗಿದ್ದು, ಕೈಗಾರಿಕೆಗಳಿಗೆ ಅನುಕೂಲವಾಗುವ ರೂಪುರೇಷೆಗಳನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು. ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಭಾರತದಲ್ಲಷ್ಟೇ ಅಲ್ಲದೆ, ವಿಶ್ವದೆಲ್ಲೆಡೆ ಆಚರಿಸುವ ಉದ್ದೇಶ ಹೊಂದಲಾಗಿದೆ. ಈ ಹಿನ್ನೆಲೆಯಲ್ಲಿ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.
-Follow us on Googlenews