ಬೆಂಗಳೂರು: ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಕೋವಿಡ್ ಲಸಿಕೆ ನೀಡಿಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿಂದು ರಾಜ್ಯದ ಎಲ್ಲ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಸಚಿವರಾದ ಗೋವಿಂದ ಕಾರಜೋಳ,ಕೆ.ಎಸ್. ಈಶ್ವರಪ್ಪ, ವಿ. ಸೋಮಣ್ಣ, ಎಂ.ಟಿ.ಬಿ. ನಾಗರಾಜ್, ಮುನಿರತ್ನ, ಮುಖ್ಯಕಾರ್ಯದರ್ಶಿ ಪಿ. ರವಿಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , ಅಧಿಕಾರ ವಿಕೇಂದ್ರೀಕರಣದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಪಾತ್ರ ಮಹತ್ವದ್ದು, ಈ ಹಿನ್ನೆಲೆಯಲ್ಲಿ ಈ ಬಾರಿ ಪ್ರತ್ಯೇಕವಾಗಿ ಸಿಇಒಗಳ ಸಭೆ ನಡೆಸಲಾಗಿದೆ. ಕೇಂದ್ರ ಸರ್ಕಾರದ ಜಲ ಜೀವನ್ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಬಸವ ಆವಾಸ್ ಯೋಜನೆ, ರಾಜ್ಯ ಸರ್ಕಾರದ ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿ ನಿಲಯ , ಶಾಲೆಗಳು, ಅಂಗನವಾಡಿಗಳ ಸ್ಥಿತಿಗತಿ, ಕೋವಿಡ್ ನಿರ್ವಹಣೆ, ಲಸಿಕೆ ವಿತರಣೆ ಸೇರಿ ಹಲವು ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದೆ ಎಂದರು. ಕೆಲವು ಜಿಲ್ಲಾ ಪಂಚಾಯತ್ ಸಿಇಒಗಳಿಗೆ ಅವರ ಕಾರ್ಯವೈಖರಿ ಸುಧಾರಿಸಿಕೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡುವ ಜೊತೆಗೆ ಪ್ರಗತಿಯ ಕುರಿತು ಪ್ರತಿ ತಿಂಗಳು ವರದಿ ನೀಡುವಂತೆ ನಿರ್ದೇಶನ ನೀಡಲಾಗಿದೆ.

ಹಳ್ಳಿಯ ಕಡೆಗೆ ತೆರಳಿ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ತಿಳಿಸಲಾಗಿದೆ ಎಂದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ನಲ್ಲಿ ಅಮೂಲಾಗ್ರ ಬದಲಾವಣೆ ತರಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಚುರುಕಿನಿಂದ ಕೆಲಸ ಮಾಡುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ರಾಜ್ಯದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಕಳೆದ ಬಾರಿಗಿಂತ ಬಿಜೆಪಿ ಪಕ್ಷ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಕೆಲವು ಕಡೆ ಗೆಲುವು ಸಾಧಿಸಿದ್ದೇವೆ ಎನ್ನುವ ಕಾರಣಕ್ಕೆ ಕಾಂಗ್ರೆಸ್ ನಾಯಕರು ಬೀಗುವುದು ಬೇಡ ಎಂದು ಹೇಳಿದರು. ರಾಜ್ಯದಲ್ಲಿ 2022ರಲ್ಲಿಯೂ ಬಿಜೆಪಿ ಸರ್ಕಾರ ಇರಲಿದೆ. 2023ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತರುವುದು ತಮ್ಮ ಗುರಿ ಎಂದು ಹೇಳಿದರು.
“ಸರ್ಕಾರದ ಕೋವಿಡ್-19 ಸೋಂಕು ನಿಯಂತ್ರಣ ನಿಯಮಗಳನ್ನು ಪಾಲಿಸಿ, ಇದು ಸ್ಕೈ ನ್ಯೂಸ್ RTWT ಕಳಕಳಿ “