ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಹೆಸರಿನಲ್ಲಿ ಮತದಾರರ ವೈಯಕ್ತಿಕ ವಿವರಗಳನ್ನು ಸಂಗ್ರಹಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿರುವುದಾಗಿ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.
ಬೂತ್ ಮಟ್ಟದ ಅಧಿಕಾರಿ ಗುರುತಿನ ಚೀಟಿ ದುರುಪಯೋಗ ಹಾಗೂ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯು ಚುನಾವಣಾ ನಿಯಮಗಳನ್ನು ಉಲ್ಲಂಘಿಸಿರುವ ಬಗ್ಗೆ ತನಿಖೆ ನಡೆಸಿ, ನಿಯಮಾನುಸಾರ ಕ್ರಮ ಜರುಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಚುನಾವಣಾ ಅಧಿಕಾರಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ಶಿವಾಜಿನಗರ ಕ್ಷೇತ್ರದ ಹಲವು ಬಡಾವಣೆಗಳಲ್ಲಿ ಮತದಾರರಿಂದ ಆಧಾರ್ ಮತ್ತಿತರರ ಮಾಹಿತಿಯನ್ನು ಪಡೆದಿರುವ ಹಿನ್ನೆಲೆಯಲ್ಲಿ ಈ ಸೂಚನೆ ಹೊರಡಿಸಲಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಪ್ರತಿ ಮನೆಗೆ ತೆರಳಿ ಆನ್ ಲೈನ್ ಅಥವಾ ಆಪ್ ಮೂಲಕ ಅರ್ಜಿ ಸಲ್ಲಿಸಲು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ನಿಯೋಜಿತವಾಗಿದ್ದ ಚಿಲುಮೆ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸೇವೆಯನ್ನು ರದ್ದುಪಡಿಸಲಾಗಿದೆ.

ಮತದಾರರ ಪಟ್ಟಿ ಪರಿಷ್ಕರಣೆ ಜಾಗೃತಿಗೆ ಅನುಮತಿ ಪತ್ರದಲ್ಲಿ ವಿಧಿಸಲಾಗಿದ್ದ ಷರತ್ತುಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಸಂಸ್ಥೆಗೆ ನೀಡಲಾಗಿದ್ದ ಅನುಮತಿಯನ್ನು ರದ್ದುಪಡಿಸಿ, ಬಿಬಿಎಂಪಿ ಆದೇಶ ಹೊರಡಿಸಿದೆ. ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಪ್ರತಿನಿಧಿಗಳಿಗೆ ಮತದಾರರ ಗುರುತಿನ ಚೀಟಿಗೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳಬಾರದಾಗಿ ಬಿಬಿಎಂಪಿ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2023ರ ಕಾರ್ಯಚಟುವಟಿಕೆಗಳ ಕುರಿತು, ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಪ್ರತಿ ಮನೆಗಳಿಗೆ ಭೇಟಿ ನೀಡಿ ಅನ್ ಲೈನ್ ಅಥವಾ ಮತದಾರರ ಸಹಾಯವಾಣಿ ಮುಖೇನಾ ಅರ್ಜಿಗಳನ್ನು ಸಲ್ಲಿಸಲು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ನಿರ್ವಹಿಸಲು ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಅನುಮತಿ ನೀಡಲಾಗಿತ್ತು.
_CLICK to Follow us on Googlenews