ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹಲವು ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಗಳ ಪರಿಸ್ಥಿತಿಗೆ ಅನುಗುಣವಾಗಿ ಶಾಲೆಗಳಿಗೆ ರಜೆ ನೀಡುವ ಅಧಿಕಾರವನ್ನು ಆಯಾ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ರಜೆ ಘೋಷಣೆ ಮಾಡಿದ ದಿನಗಳ ಶೈಕ್ಷಣಿಕ ಚಟುವಟಿಕೆಗಳನ್ನು ಮುಂದಿನ ದಿನಗಳಲ್ಲಿ ಸರಿದೂಗಿಸುವ ಷರತ್ತಿಗೊಳಪಟ್ಟು ರಜೆ ಘೋಷಿಸುವಂತೆ ಇಲಾಖೆಯ ಆಯುಕ್ತರು ಸೂಚಿಸಿದ್ದಾರೆ.
2021-22ನೇ ಶೈಕ್ಷಣಿಕ ಸಾಲಿನಲ್ಲಿ ಪೂರ್ವ ಪ್ರಾಥಮಿಕದಿಂದ 10ನೇ ತರಗತಿವರೆಗಿನ ಎಲ್ಲ ಶಾಲೆಗಳನ್ನು ಕೋವಿಡ್ -19ರ ನಂತರ ಭೌತಿಕವಾಗಿ ಆರಂಭಿಸಿದ್ದು, ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಹಲವೆಡೆ ತೊಂದರೆಯಾಗಿದೆ. ಈ ನಿಟ್ಟಿನಲ್ಲಿ ಪರಿಸ್ಥಿತಿಯನ್ನು ಆಧರಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಈ ಮಧ್ಯೆ ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಯಲ್ಲೂ ಕೂಡ ರಜೆ ಘೋಷಿಸಲಾಗಿದೆ. ತುಮಕೂರು ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಿರುಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇರುವುದರಿಂದ ನಾಳೆ ಮತ್ತು ನಾಡಿದ್ದು ಜಿಲ್ಲೆಯ ಎಲ್ಲ ಸರ್ಕಾರಿ ಮತ್ತು ಖಾಸಗಿ, ಪೂರ್ವ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ ಆದೇಶ ಹೊರಡಿಸಿದ್ದಾರೆ.
