ಬೆಂಗಳೂರು: ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸೇರಿದಂತೆ ಹಲವು ಗಣ್ಯರು ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ ಪ್ರದಾನ ಮಾಡಿದರು.

ಬಳಿಕ ಮುಖ್ಯಮಂತ್ರಿ, ಡಾ. ಬಿ.ಆರ್. ಅಂಬೇಡ್ಕರ್ ಅವರು ಭಾರತಕ್ಕೆ ಬಲಿಷ್ಠ ಹಾಗೂ ಸದೃಢವಾದ ಸಂವಿಧಾನವನ್ನು ನೀಡಿದ್ದಾರೆ. ಯಾವುದೇ ಸಮಸ್ಯೆಗಳಿಗೆ ಪರಿಹಾರ ಒದಗಿಸುವಲ್ಲಿ ಸಂವಿಧಾನ ಅತ್ಯಂತ ಪ್ರಮುಖವಾದ ಪಾತ್ರ ವಹಿಸಿದೆ. ಸೂರ್ಯ, ಚಂದ್ರರಂತೆ ಬಾಬಾಸಾಹೇಬ್ ಅವರ ಕೀರ್ತಿ ಅಜರಾಮರವಾಗಿ ಉಳಿಯಲಿದೆ. ಸಮಾಜದ ಏಳಿಗೆಗಾಗಿ, ಅಭಿವೃದ್ಧಿಗಾಗಿ ಹಲವು ಕೊಡುಗೆಗಳನ್ನು ಅವರು ನೀಡಿದ್ದಾರೆ ಎಂದರು. ಮಹಿಳೆಯರ ಶ್ರೇಯೋಭಿವೃದ್ಧಿಗಾಗಿ 500 ಕೋಟಿ ರೂಪಾಯಿ ಹಣವನ್ನು ಮೀಸಲಿರಿಸಲಾಗಿದೆ. ವಿಶೇಷವಾಗಿ ಪರಿಶಿಷ್ಟ ಜಾತಿ, ಪಂಗಡಗಳಿಗೆ 50 ಕೋಟಿ ರೂಪಾಯಿ ನಿಗದಿಪಡಿಸಲಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ವಸತಿ ನಿಲಯಗಳನ್ನು ಸ್ಥಾಪಿಸಲು 280 ಕೋಟಿ ರೂಪಾಯಿ ಹಣವನ್ನು ಮೀಸಲಾಗಿಟ್ಟಿದ್ದು, ಶೀಘ್ರದಲ್ಲೇ ಕಾಮಗಾರಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ತಿಳಿಸಿದರು.