ಬೆಂಗಳೂರು: ಬರುವ ನವೆಂಬರ್ ನಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಮೂರು ದಿನಗಳ ಬೆಂಗಳೂರು ಟೆಕ್ ಸಮ್ಮಿಟ್ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಐಟಿಬಿಟಿ ಸೇರಿದಂತೆ ವಿವಿಧ ವಲಯಗಳಲ್ಲಿನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿದರು. ಇದೇ ಸಂದರ್ಭದಲ್ಲಿ ಸಮ್ಮಿಟ್ ಕುರಿತ ಧ್ಯೇಯಘೋಷವನ್ನು ಬಿಡುಗಡೆ ಮಾಡಿದರು.
ನಂತರ ಮುಖ್ಯಮಂತ್ರಿ, ನವೆಂಬರ್ ನಲ್ಲಿ ನಡೆಯಲಿರುವ 25ನೇ ಬೆಂಗಳೂರು ಟೆಕ್ ಸಮ್ಮಿಟ್ ಅನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಸಭೆಯಲ್ಲಿ ಪಾಲ್ಗೊಂಡಿದ್ದ ವಿವಿಧ ವಲಯಗಳ ಉದ್ಯಮಗಳ ಮುಖ್ಯಸ್ಥರು ಹತ್ತು ಹಲವು ಸಲಹೆಗಳನ್ನು ನೀಡಿದ್ದಾರೆ. ಅವುಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಿದ್ದು, ಅನುಷ್ಠಾನಕ್ಕೆ ತರಲಾಗುವುದು ಎಂದರು. ಅಮೆರಿಕದ ನಂತರದ ಸ್ಥಾನದಲ್ಲಿ ಬೆಂಗಳೂರು ಸಿಲಿಕಾನ್ ವ್ಯಾಲಿ ಇದ್ದು, ಇದನ್ನು ಅಗ್ರಸ್ಥಾನಕ್ಕೆ ಕೊಂಡೊಯ್ಯುವ ಕುರಿತು ಕಾರ್ಯಯೋಜನೆ ರೂಪಿಸಲಾಗುವುದು. ಐಟಿಬಿಟಿ ಸೇರಿದಂತೆ ಎಲ್ಲ ಉದ್ಯಮಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಎಲ್ಲ ರೀತಿಯ ಮೂಲಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಐಟಿಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಈ ಹಿಂದಿನ 2 ವರ್ಷದಲ್ಲಿ ವರ್ಚುವಲ್ ಮೂಲಕ ಬೆಂಗಳೂರಿನಲ್ಲಿ ತಂತ್ರಜ್ಞಾನ ಸಮ್ಮಿಟ್ ನಡೆದಿತ್ತು. ಈ ಬಾರಿ ನವೆಂಬರ್ 16ರಿಂದ 3 ದಿನಗಳ ಕಾಲ ಸಮ್ಮಿಟ್ ಭೌತಿಕವಾಗಿ ನಡೆಯಲಿದೆ. ಈ ಶೃಂಗಸಭೆಯನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ ಎಂದು ಹೇಳಿದರು.
ಐಟಿ, ಬಿಟಿ ಖಾತೆ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಸಮ್ಮಿಟ್ ಕುರಿತ ಮಾಹಿತಿಯನ್ನೊಳಗೊಂಡ ಕಿರುಹೊತ್ತಿಗೆ ಬಿಡುಗಡೆ ಮಾಡಿದರು. ಐಟಿ ಬಿಟಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ, ನಿರ್ದೇಶಕಿ ಮೀನಾ ನಾಗರಾಜ್, ಐಟಿ ದಿಗ್ಗಜರಾದ ಕ್ರಿಸ್ ಗೋಪಾಲಕೃಷ್ಣ ಸೇರಿದಂತೆ ಇತರೆ C E Oಗಳು ಸಭೆಯಲ್ಲಿ ಭಾಗವಹಿಸಿದ್ದರು.
