ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗಳಲ್ಲಿನ ಪರಿಸ್ಥಿತಿ ಆಧರಿಸಿ, ಇನ್ನೆರಡು ದಿನಗಳಲ್ಲಿ ಹಲವು ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕೋವಿಡ್ ನಿರ್ವಹಣೆ ಹಾಗೂ ಜಿಲ್ಲೆಗಳಲ್ಲಿರುವ ಪರಿಸ್ಥಿತಿಯನ್ನು ಕೂಲಂಕುಷವಾಗಿ ಪರಿಶೀಲಿಸಿ ವರದಿ ಸಲ್ಲಿಸುವಂತೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಸೂಚಿಸಲಾಗಿದೆ. ಅವರು ನೀಡುವ ವರದಿ ಆಧರಿಸಿ ಶೀಘ್ರ ಈ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಪ್ರಸ್ತುತ ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣದಲ್ಲಿದ್ದು, ಯಾರೂ ಕೂಡ ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು.
ಇದೇ ವೇಳೆ, ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ, ಈ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವುದು ಅಗತ್ಯವಿಲ್ಲ. ಏನಾದರೂ ತಪ್ಪುಗಳಿದ್ದರೆ ಸರಿಪಡಿಸಲಾಗುವುದು ಎಂದು ತಿಳಿಸಿದರು.

ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವನ್ನಪ್ಪಿರುವ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ, ಎಲ್ಲಾ ಬಡಾವಣೆ ನೀರನ್ನು ಪರೀಕ್ಷೆಗೆ ಒಳಪಡಿಸಿ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ ಮುಖ್ಯಮಂತ್ರಿ, ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ತಿಳಿಸಿದರು.