ಬೆಂಗಳೂರು: ನವೋದ್ಯಮ, ಸಂಶೋಧನೆ ಹಾಗೂ ಅಮೃತ ಯೋಜನೆಗಳ ಅನುಷ್ಠಾನದಲ್ಲಿ ಕರ್ನಾಟಕ ಗಣನೀಯ ಪ್ರಗತಿ ಸಾಧಿಸಿದೆ. ಕೇಂದ್ರ ಸರ್ಕಾರದ ಸಂಯೋಜಿತ ಯೋಜನೆಗಳ ಜಾರಿಯಲ್ಲಿಯೂ ರಾಜ್ಯ ಉನ್ನತ ಸ್ಥಾನದಲ್ಲಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಶ್ಲಾಘಿಸಿದ್ದಾರೆ.
74ನೇ ಗಣರಾಜ್ಯೋತ್ಸವ ಆಚರಣೆ ಅಂಗವಾಗಿ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ನಾಡಿನ ಜನತೆಗೆ ಸಂದೇಶ ನೀಡಿದರು.
ಬಳಿಕ ಥಾವರ್ ಚಂದ್ ಗೆಹ್ಲೋಟ್, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಲ್ಲಿ ಕರ್ನಾಟಕ ದೇಶದ ಮೊದಲ ರಾಜ್ಯವಾಗಿ ಅತ್ಯುತ್ತಮ ನಿರ್ವಹಣೆ ತೋರಿದೆ. ಪ್ರಧಾನಮಂತ್ರಿ ಕೃಷಿ ಸಮ್ಮಾನ್ ಯೋಜನೆ, ಜಲಶಕ್ತಿ ಹಾಗೂ ಜಲಜೀವನ್ ಮಿಷನ್ ಯೋಜನೆಗಳ ಅನುಷ್ಠಾನದಲ್ಲಿ ಯಶಸ್ಸು ಕಂಡಿದೆ. ಸಂವಿಧಾನದ ಆಶಯಗಳಿಗೆ ಆದ್ಯತೆ ನೀಡುವ ಮೂಲಕ ಕರ್ನಾಟಕ ರಾಷ್ಟ್ರಕ್ಕೆ ಮಾದರಿ ಆಡಳಿತ ನೀಡುತ್ತಿದೆ ಎಂದರು.

ಪೊಲೀಸ್, ಸ್ಕೌಟ್ಸ್, ಎನ್ ಸಿಸಿ, ಸೇವಾದಳ ಹಾಗೂ ವಿವಿಧ ಶಾಲಾ ಮಕ್ಕಳಿಂದ ಪಥಸಂಚಲನ ಗೌರವವನ್ನು ರಾಜ್ಯಪಾಲರು ಸ್ವೀಕರಿಸಿದರು.
ಬಳಿಕ ಸುಮಾರು 2 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಂದ ದೇಶಭಕ್ತಿ ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.
_ನಮ್ಮನ್ನು ಗೂಗಲ್ ನ್ಯೂಸ್ ನಲ್ಲಿ ಫಾಲೋ-ಸಪೋರ್ಟ್ ಮಾಡಲು ಕ್ಲಿಕ್ಕಿಸಿ