ಬೆಂಗಳೂರು: ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧದಲ್ಲಿಂದು ಸಭೆ ನಡೆಸಿದರು. ಮೈ ಶುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿ ನಡೆಸಬೇಕು ಎಂದು ಆಗ್ರಹಿಸಿ, ಮಂಡ್ಯ ಜಿಲ್ಲಾ ರೈತರ ಹಿತ ರಕ್ಷಣಾ ಸಮಿತಿ ಒತ್ತಾಯ ಮಾಡಿತ್ತು. ಈ ನಿಟ್ಟಿನಲ್ಲಿ ಇಂದು ಮೈ ಶುಗರ್ ಸಕ್ಕರೆ ಕಾರ್ಖಾನೆಯ ಪುನಶ್ಚೇತನ ಕುರಿತು, ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರೊಂದಿಗೆ ಮುಖ್ಯಮಂತ್ರಿ, ಚರ್ಚೆ ನಡೆಸಿದರು. ಸಚಿವರಾದ ಜೆ.ಸಿ. ಮಾಧುಸ್ವಾಮಿ, ಕೆ.ಸಿ. ನಾರಾಯಣಗೌಡ, ಎಸ್. ಟಿ. ಸೋಮಶೇಖರ್, ಶಂಕರ್ ಪಾಟೀಲ್ ಮುನೇನಕೊಪ್ಪ, ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹಾಗೂ ಆ ಭಾಗದ ಶಾಸಕರು ರೈತ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

ಬಳಿಕ ಬಸವರಾಜ ಬೊಮ್ಮಾಯಿ, ಮೈಶುಗರ್ ಕಾರ್ಖಾನೆ ಪುನಶ್ಚೇತನಗೊಳಿಸಲು ಈಗಾಗಲೇ ಸಚಿವ ಸಂಪುಟದಲ್ಲಿ ಚರ್ಚಿಸಲಾಗಿದ್ದು, ಹಾಲಿ ಕಾರ್ಖಾನೆಯಲ್ಲಿನ ಯಂತ್ರೋಪಕರಣಗಳ ವಸ್ತುಸ್ಥಿತಿ, ಪುನಶ್ಚೇತನ ಬಳಿಕ ಕಾರ್ಖಾನೆಗೆ ಕಬ್ಬು ಪೂರೈಕೆ ಮಾಡುವ ರೈತರಿಗೆ ಸದಸ್ಯತ್ವ, ಕಾರ್ಖಾನೆ ಸುಗಮವಾಗಿ ನಡೆಯಲು ಅಗತ್ಯವಿರುವ ಹಣಕಾಸು ನೆರವು ಇತ್ಯಾದಿಗಳ ಕುರಿತು ಸರ್ಕಾರಕ್ಕೆ ಸಂಪೂರ್ಣ ಮಾಹಿತಿ ವರದಿ ಅಗತ್ಯವಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಮಗ್ರ ಪರಿಶೀಲನೆ ನಡೆಸಬೇಕು. ತಜ್ಞ ಅಧಿಕಾರಿಗಳು ನೀಡುವ ವರದಿಯನ್ನು ಪಡೆದು, ಬಳಿಕ ಸಚಿವ ಸಂಪುಟದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಶೀಘ್ರ ಕಾರ್ಖಾನೆಯಲ್ಲಿ ಕಬ್ಬು ಅರೆಯುವ ಪ್ರಕ್ರಿಯೆ ಆರಂಭಿಸಲು ಯಂತ್ರೋಪಕರಣಗಳನ್ನು ಸಜ್ಜುಗೊಳಿಸಲು ಸೂಚಿಸಲಾಗಿದೆ. ಮೈಶುಗರ್ ಕಾರ್ಖಾನೆ ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
