ವಿಧಾನಪರಿಷತ್: ಬಿಎಂಟಿಸಿ ಒಳಗೊಂಡಂತೆ ಸಾರಿಗೆ ಸಂಸ್ಥೆಯನ್ನು ಖಾಸಗೀಕರಣ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಭಾನಾಯಕ ಕೋಟಾ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್ತಿಗಿಂದು ತಿಳಿಸಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಮುನಿರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು , ಕಾರ್ಮಿಕರ, ಸಾರ್ವಜನಿಕರ ಹಿತ ದೃಷ್ಠಿಯಿಂದ ಸಾರಿಗೆ ಸಂಸ್ಥೆಯನ್ನು ಖಾಸಗೀಕರಣ ಮಾಡುವುದಿಲ್ಲ. ಅಂತಹ ಯಾವ ಪ್ರಸ್ತಾವಗಳು ಸರ್ಕಾರದ ಮುಂದಿಲ್ಲ ಎಂದರು. B M T C ಸಂಸ್ಥೆ ಒಟ್ಟು 733 ಕೋಟಿ ಸಾಲ ಪಡೆದಿದೆ. ಅದರಲ್ಲಿ 195 ಕೋಟಿ ರೂ. ಮರು ಪಾವತಿ ಮಾಡಿದೆ. ಸಾರಿಗೆ ಸಂಸ್ಥೆಗಳ ಹಳೆಯ ಬಸ್‍ಗಳನ್ನು ನಿಯಮಾನುಸಾರ ಬದಲಾವಣೆ ಮಾಡಲಾಗುತ್ತಿದೆ. ಅದರಲ್ಲಿ 8 ಲಕ್ಷ ಕಿಲೋ ಮೀಟರ್ ಓಡಿರುವ ಅಥವಾ 11 ವರ್ಷ ಹಳೆಯದಾದ ವಾಹನಗಳನ್ನು ಬದಲಾವಣೆ ಮಾಡಲಾಗುತ್ತಿದೆ. ವೋಲ್ವೋ ಬಸ್ ಗಳು 10 ಲಕ್ಷ ಕಿಲೋ ಮೀಟರ್ ಸಂಚರಿಸಿದ ಬಳಿಕ ವಿಲೇವಾರಿ ಮಾಡಲಾಗುವುದು ಎಂದರು. ಸದಸ್ಯ ಯು.ಬಿ.ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಕೋವಿಡ್ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಯಾವುದೇ ಯೋಜನೆಯನ್ನು ಸ್ಥಗಿತಗೊಳಿಸಿಲ್ಲ. ಕೋವಿಡ್ ಅವಧಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅನುಷ್ಠಾನ ಮಾಡುತ್ತಿರುವ ಯಾವುದೇ ಯೋಜನೆಗಳು ಕುಂಠಿತಗೊಂಡಿಲ್ಲ ಎಂದು ಹೇಳಿದರು. ಆದರೆ, ಕೋವಿಡ್ ಹಿನ್ನೆಲೆ ನಿಗಮಗಳಿಂದ ಅನುಷ್ಠಾನ ಮಾಡುತ್ತಿರುವ ಸ್ವಯಂ ಉದ್ಯೋಗ ಯೋಜನೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಸಹಾಯಧನ ಮೊತ್ತವನ್ನು ಪರಿಷ್ಕರಿಸಲಾಗಿದೆ ಎಂದರು.

ಸದಸ್ಯ ಎಸ್.ವಿ.ಸಂಕನೂರು ಅವರ ಪ್ರಶ್ನೆಗೆ ಉತ್ತರಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್, ರಾಜ್ಯದ ನಾಲ್ಕು ಕೃಷಿ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿಯವರು ಅನುಮತಿ ನೀಡಿದ್ದು, ಶೀಘ್ರವೇ ನೇಮಕಾತಿ ಪ್ರತಿಕ್ರಿಯೆಯನ್ನು ಪೂರ್ಣಗೊಳಿಸುವುದಾಗಿ ಹೇಳಿದರು. ರಾಜ್ಯದ ನಾಲ್ಕು ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಪರಿಷ್ಕೃತ ಪ್ರಸ್ತಾವನೆಗಳನ್ನು ಸ್ವೀಕರಿಸಲಾಗಿದೆ. ಅವುಗಳನ್ನು ಪರಿಶೀಲನೆ ಮಾಡಲಾಗುತ್ತಿದೆ ಎಂದರು.
“ಸರ್ಕಾರದ ಕೋವಿಡ್-19 ಸೋಂಕು ನಿಯಂತ್ರಣ ಕ್ರಮಗಳನ್ನು ಪಾಲಿಸಿ, ಇದು ಸ್ಕೈ ನ್ಯೂಸ್ RTWT ಕಳಕಳಿ”