ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿ ವಿಶ್ವವಿದ್ಯಾಲಯದ ಆವರಣದಲ್ಲಿಂದು ನೂತನ ಕಟ್ಟಡಗಳ ಉದ್ಘಾಟನೆ , 128 ಪುಸ್ತಕಗಳ ಬಿಡುಗಡೆ ಹಾಗೂ ಸಂಚಾರಿ ಪುಸ್ತಕ ಮಾರಾಟ ವಾಹನ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

ಬಳಿಕ ಮುಖ್ಯಮಂತ್ರಿ, ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಅಗತ್ಯ ಮೂಲಸೌಕರ್ಯ ಇನ್ನಿತರ ಚಟುವಟಿಕೆಗಳಿಗಾಗಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮುಖ್ಯಮಂತ್ರಿ ವಿವೇಚನಾ ಅನುದಾನದಡಿಯಲ್ಲಿ 20 ಕೋಟಿ ರೂಪಾಯಿಗಳನ್ನು ತಕ್ಷಣ ಬಿಡುಗಡೆ ಮಾಡಲಾಗುವುದು. ಇದರಲ್ಲಿ ಶಿಷ್ಯವೇತನ, ಹೊರಗುತ್ತಿಗೆ ಸಿಬ್ಬಂದಿ, ಬಾಕಿ ವೇತನ ಹಾಗೂ ತುರ್ತು ಅಗತ್ಯ ಕೆಲಸಗಳಿಗೆ ಬಳಸಿಕೊಳ್ಳಬಹುದಾಗಿದೆ ಎಂದರು. ವಿಶ್ವವಿದ್ಯಾಲಯಕ್ಕೆ ತುರ್ತಾಗಿ 80 ಕೋಟಿ ರೂಪಾಯಿಗಳ ಅನುದಾನ ಒದಗಿಸಲು ಕುಲಪತಿಗಳು ಪ್ರಸ್ತಾವನೆ ಸಲ್ಲಿಸಿದ್ದು, ಹಂತ ಹಂತವಾಗಿ ಹಣ ಬಿಡುಗಡೆ ಮಾಡಲಾಗುವುದು. ಕನ್ನಡ ಭಾಷೆಯನ್ನು ಸಮೃದ್ಧಗೊಳಿಸುವ ನಿಟ್ಟಿನಲ್ಲಿ ರಚನಾತ್ಮಕ ಸಂಶೋಧನೆಗಳು ಹೆಚ್ಚಬೇಕು ಎಂದ ಅವರು, ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ. ಪ್ರಕಾಶ್ ಹೆಸರಿನಲ್ಲಿ ಅಧ್ಯಯನಪೀಠ ಸ್ಥಾಪಿಸಲಾಗುವುದು. ಈ ಕುರಿತು ರೂಪುರೇಷೆಗಳನ್ನು ಸಿದ್ಧಪಡಿಸುವಂತೆ ಕುಲಪತಿಗಳಿಗೆ ಸೂಚನೆ ನೀಡಿದರು. ಆರಗ ಜ್ಞಾನೇಂದ್ರ, ಕನ್ನಡವನ್ನು ಅನ್ನದ ಭಾಷೆಯಾಗಿ ರೂಪಿಸಲು ಶೈಕ್ಷಣಿಕ ಪ್ರಗತಿ ಅತ್ಯಗತ್ಯ. ಕನ್ನಡ ವಿಶ್ವವಿದ್ಯಾಲಯ ಸಾಂಸ್ಕೃತಿಕ ಹಾಗೂ ಸಾಹಿತ್ಯಕ ಮೌಲ್ಯಗಳ ಸಂಕೇತವಾಗಿದೆ ಎಂದರು.

ಗೃಹ ಸಚಿವ ಆರಗ ಜ್ಞಾನೇಂದ್ರ, ಸಾರಿಗೆ ಸಚಿವ ಬಿ. ಶ್ರೀರಾಮುಲು, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ್, ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ಸೋಮಶೇಖರ್ ರೆಡ್ಡಿ, ವೈ ಎಂ ಸತೀಶ್, ವಿಶ್ವವಿದ್ಯಾಲಯದ ಕುಲಪತಿ ಡಾ. ಸಾ ಚಿ ರಮೇಶ್, ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಮತ್ತಿತರರು ಪಾಲ್ಗೊಂಡರು.
